ಬೆಂಗಳೂರು: ಯಾದಗಿರಿ ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕೈಗಾರಿಕೆಗಳಿಂದ ಸಂಸ್ಕರಿಸದ ಹಾಗೂ ಕಲುಷಿತ ತ್ಯಾಜ್ಯ ನೀರನ್ನು ಹೊರಬಿಡಲಾಗುತ್ತಿದ್ದು, ಅದು ಭೀಮಾ ನದಿಗೆ ಸೇರುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಗಂಭೀರವಾಗಿ ಪರಿಗಣಿಸಿದ್ದಾರೆ.
ಕೈಗಾರಿಕೆಗಳಿಂದ ಹೊರಬರುವ ತ್ಯಾಜ್ಯ ನೀರನ್ನು ಸೂಕ್ತವಾಗಿ ಸಂಸ್ಕರಿಸದೆ ನದಿ ಹಾಗೂ ಇತರೆ ಜಲಮೂಲಗಳಿಗೆ ಹರಿಸುವುದರಿಂದ ಜಲಮಾಲಿನ್ಯ ಉಂಟಾಗುವುದರ ಜೊತೆಗೆ ಜನರು ಮತ್ತು ಜಾನುವಾರುಗಳ ಆರೋಗ್ಯ, ಕೃಷಿ ಚಟುವಟಿಕೆಗಳು ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದ್ದಾರೆ.
ಇಂತಹ ಘಟನೆಗಳನ್ನು ತಡೆಯುವುದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಮುಖ ಜವಾಬ್ದಾರಿಯಾಗಿದ್ದು, ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸಂಬಂಧಿತ ಕೈಗಾರಿಕೆಗಳಲ್ಲಿ ತಕ್ಷಣ ಸ್ಥಳ ಪರಿಶೀಲನೆ ನಡೆಸುವಂತೆ ಸಚಿವರು ಸೂಚಿಸಿದ್ದಾರೆ.
ಕೈಗಾರಿಕೆಗಳಿಂದ ಹೊರಬಿಡಲಾಗುತ್ತಿರುವ ತ್ಯಾಜ್ಯ ನೀರಿನ ಮಾದರಿಗಳನ್ನು ಸಂಗ್ರಹಿಸಿ, ಅವುಗಳ ಗುಣಮಟ್ಟವನ್ನು ಪರೀಕ್ಷಿಸಬೇಕು. ನಿಯಮ ಉಲ್ಲಂಘಿಸಿರುವುದು ಕಂಡುಬಂದಲ್ಲಿ ಸಂಬಂಧಿತ ಕೈಗಾರಿಕೆಗಳ ವಿರುದ್ಧ ಯಾವುದೇ ವಿಳಂಬವಿಲ್ಲದೆ ಕಾನೂನುಬದ್ಧ ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.
ಇದೇ ವೇಳೆ, ಈ ರೀತಿಯ ಬೇಜವಾಬ್ದಾರಿ ಕಾರ್ಯವೈಖರಿಗೆ ಕಾರಣರಾದ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಿ ವಿಚಾರಣೆ ನಡೆಸಬೇಕು ಹಾಗೂ ಕೈಗೊಂಡ ಕ್ರಮಗಳ ಕುರಿತು ಅನುಸರಣಾ ವರದಿ ಸಲ್ಲಿಸುವಂತೆ ಸಚಿವರು ಸೂಚಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟುನಿಟ್ಟಿನ ಮುಂಜಾಗ್ರತಾ ಹಾಗೂ ಮೇಲ್ವಿಚಾರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ನಿರ್ದೇಶನ ನೀಡಿದ್ದಾರೆ.



Post Comment