ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ-2026ರ ಆಚರಣೆಯ ಸಂದರ್ಭದಲ್ಲಿ ಶಬ್ದ ಹಾಗೂ ವಾಯು ಮಾಲಿನ್ಯ ನಿಯಂತ್ರಣಕ್ಕೆ ಸಚಿವ ರಾಮಲಿಂಗ ರೆಡ್ಡಿ ಅವರು ಸೂಚಿಸಿದ್ದಾರೆ
2026ರ ನವೆಂಬರ್ 8ರಿಂದ 10ರವರೆಗೆ ನಡೆಯಲಿರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ.
ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ, ಪಟಾಕಿಗಳ ಮಾರಾಟ ಮಳಿಗೆ ಹಾಗೂ ಗೋದಾಮುಗಳಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಲಿದೆ. ಹಸಿರು ಪಟಾಕಿಗಳನ್ನು ಹೊರತುಪಡಿಸಿ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿರುವುದು ಕಂಡುಬಂದಲ್ಲಿ ಅಂತಹ ಗೋದಾಮುಗಳನ್ನು ಮುಟ್ಟುಗೋಲು ಹಾಕಿಕೊಂಡು, ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ.
ಹಸಿರು ಪಟಾಕಿಗಳ ಪ್ಯಾಕೆಟ್‌ಗಳ ಮೇಲೆ ಅಧಿಕೃತ ಹಸಿರು ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಕಡ್ಡಾಯವಾಗಿದ್ದು, ಇವುಗಳ ಸತ್ಯಾಸತ್ಯತೆಯನ್ನು ಪರಿಸರ ಅಧಿಕಾರಿಗಳಿಂದ ಖಚಿತಪಡಿಸಿಕೊಳ್ಳಬೇಕು. ಹಸಿರು ಚಿಹ್ನೆ ಇಲ್ಲದ ಪಟಾಕಿಗಳನ್ನು ಹಸಿರು ಪಟಾಕಿಗಳೆಂದು ಪರಿಗಣಿಸಲಾಗುವುದಿಲ್ಲ.
ಸ್ಥಳೀಯ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ನಿಷೇಧಿತ ಪ್ರದೇಶಗಳ ಸುತ್ತಮುತ್ತ ಯಾವುದೇ ರೀತಿಯ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಪಟಾಕಿ ಸಿಡಿಸುವಾಗ ಮಕ್ಕಳು, ವೃದ್ಧರು, ಪ್ರಾಣಿಗಳು ಮತ್ತು ಪಕ್ಷಿಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.
ಇದಲ್ಲದೆ, ಮೆಟ್ರೋ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ ಹಾಗೂ ಮಾಲ್‌ಗಳಲ್ಲಿ ಕರಪತ್ರ, ಭಿತ್ತಿಪತ್ರ, ಆಡಿಯೋ ಮತ್ತು ವಿಡಿಯೋಗಳ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಣೆಯ ಕುರಿತು ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಹೊರರಾಜ್ಯಗಳಿಂದ ನಿಷೇಧಿತ ಪಟಾಕಿಗಳ ಅಕ್ರಮ ಸಾಗಾಟ ತಡೆಯಲು ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಿ, ನಿಷೇಧಿತ ಪಟಾಕಿಗಳು ಹಾಗೂ ಸಾಗಾಟಕ್ಕೆ ಬಳಸುವ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೂ ಸೂಚಿಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕಿದೆ.
ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ:
ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ನಿಗದಿತ ಸಮಯವನ್ನು ಹೊರತುಪಡಿಸಿ ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರಿಸರ ಸಂರಕ್ಷಣೆ, ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ನಿಯಮಗಳನ್ನು ಪಾಲಿಸಿ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.



Post Comment