ಬೆಂಗಳೂರು: ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ಸಾಂವಿಧಾನಿಕ ಮೌಲ್ಯಗಳ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ದೇಶಾದ್ಯಂತ ನಡೆಯುತ್ತಿರುವ ‘ವೋಟ್ ಬಚಾವೋ, ದೇಶ ಬಚಾವೋ’ ಅಭಿಯಾನದ ಅಂಗವಾಗಿ ಬೆಂಗಳೂರಿನ ಆಸ್ಟಿನ್ ಟೌನ್‌ನಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ಮತಗಳ್ಳತನದ ಆರೋಪಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎನ್.ಎ. ಹ್ಯಾರಿಸ್, “ವೋಟ್ ಚೋರಿ ಪ್ರಜಾಪ್ರಭುತ್ವಕ್ಕೆ ಮಹಾಮಾರಿಯಿದ್ದಂತೆ. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕಿನ ಪಾವಿತ್ರ್ಯವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಯಾವುದೇ ಪ್ರಯತ್ನಗಳು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸವಾಲಾಗಿವೆ” ಎಂದು ಹೇಳಿದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ಚುನಾವಣಾ ಆಯೋಗದ ಉತ್ತರದಾಯಿತ್ವ ಖಚಿತವಾಗಬೇಕು ಎಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ‘ವೋಟ್ ಚೋರಿ ನಿಲ್ಲಿಸಿ’, ‘ಪ್ರಜಾಪ್ರಭುತ್ವ ಉಳಿಸಿ’, ‘ಸಂವಿಧಾನ ರಕ್ಷಿಸಿ’ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಮತದಾನದ ಹಕ್ಕಿನ ರಕ್ಷಣೆಗೆ ಒಗ್ಗಟ್ಟಿನ ಸಂದೇಶ ಸಾರಲಾಯಿತು.
ದೇಶದ ಪ್ರತಿಯೊಬ್ಬ ನಾಗರಿಕನ ಮತವೂ ಸಮಾನ ಮೌಲ್ಯ ಹೊಂದಿದ್ದು, ಆ ಹಕ್ಕನ್ನು ಸಂರಕ್ಷಿಸುವುದು ಎಲ್ಲರ ಸಾಮೂಹಿಕ ಹೊಣೆಗಾರಿಕೆಯಾಗಿದೆ ಎಂಬ ಸಂದೇಶದೊಂದಿಗೆ ಜಾಗೃತಿ ಕಾರ್ಯಕ್ರಮ ಮುಕ್ತಾಯಗೊಂಡಿತು.



Post Comment