×

HSR ಬಡಾವಣೆಯ 14ನೇ ಮುಖ್ಯರಸ್ತೆಯಲ್ಲಿ ಕಳಪೆ ಕಾಮಗಾರಿ ಆರೋಪ: ಕಾಮಗಾರಿ ಸ್ಥಗಿತಗೊಳಿಸಿ ಗುಣಮಟ್ಟ ಪರಿಶೀಲನೆಗೆ ಸಚಿವ ರಾಮಲಿಂಗಾ ರೆಡ್ಡಿ ಆಗ್ರಹ

ಬೆಂಗಳೂರು: ಎಚ್‌ಎಸ್‌ಆರ್ ಬಡಾವಣೆಯ 5ನೇ ಹಂತದ 14ನೇ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಿ ಗುಣಮಟ್ಟ ಮರುಪರಿಶೀಲನೆ ನಡೆಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ಬೆಂಗಳೂರು ಉಸ್ತುವಾರಿ ಜವಾಬ್ದಾರಿ ಹೊಂದಿರುವ ರಾಮಲಿಂಗಾ ರೆಡ್ಡಿ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಎಚ್‌ಎಸ್‌ಆರ್ ಬಡಾವಣೆಯ 5ನೇ ಹಂತದ 14ನೇ ಮುಖ್ಯರಸ್ತೆಯಲ್ಲಿ ಬೇಟರ್ ಬೆಂಗಳೂರು ಪ್ರಾಧಿಕಾರದ ಬಿ.ಸ್ಟೈಲ್ ವಿಭಾಗದಿಂದ ರಸ್ತೆ ಫೈಟ್‌ಟಾಪಿಂಗ್ ಕಾಮಗಾರಿ ಕೈಗೊಳ್ಳಲಾಗಿದೆ. ಇದರ ಜೊತೆಗೆ 12 ಮೀಟರ್ ಉದ್ದದ 1 ಡಯಾ ಬೃಹತ್ ಮಳೆನೀರು ಚರಂಡಿ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳೂ ನಡೆಯುತ್ತಿವೆ.

ಈ ಕಾಮಗಾರಿಗಳ ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಗುತ್ತಿಗೆದಾರರು ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಕಳಪೆ ಕಾಮಗಾರಿ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಸಮರ್ಪಕ ಕಾಮಗಾರಿಯಿಂದ ಬಡಾವಣೆಯ ಒಳಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸಂಪರ್ಕ ಕೊಳವೆಗಳು ಹಾಗೂ ರಸ್ತೆಯ ಭಾಗಶಃ ಹಾನಿಯಾಗಿದ್ದು, ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಇದರಿಂದ ಸ್ಥಳೀಯ ನಿವಾಸಿಗಳು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳ ಪರಿಶೀಲನೆ ವೇಳೆ ಕಾಮಗಾರಿಯ ಗುಣಮಟ್ಟದ ಬಗ್ಗೆ ಜಲಮಂಡಳಿಯ ಅಭಿಯಂತರರ ಗಮನಕ್ಕೆ ತಂದಿದ್ದರೂ ಯಾವುದೇ ಸೂಕ್ತ ಪ್ರತಿಕ್ರಿಯೆ ದೊರೆತಿಲ್ಲ ಹಾಗೂ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಸಚಿವರು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೀಗಾಗಿ, ಎಚ್‌ಎಸ್‌ಆರ್ ಬಡಾವಣೆಯ 5ನೇ ಹಂತದ 14ನೇ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಿ, ಕಾಮಗಾರಿಯ ಗುಣಮಟ್ಟವನ್ನು ಮರುಪರಿಶೀಲಿಸಬೇಕು. ಕಳಪೆ ಕಾಮಗಾರಿ ನಡೆಸಿರುವ ಗುತ್ತಿಗೆದಾರರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed