×

ಪರಿಸರ ಸ್ನೇಹಿ ದೀಪಾವಳಿ ಆಚರಿಸಿ: ಸಚಿವ ರಾಮಲಿಂಗಾ ರೆಡ್ಡಿ ಮನವಿ

ಬೆಂಗಳೂರು: 2026ನೇ ಸಾಲಿನ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾ ರೆಡ್ಡಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ಪಟಾಕಿಗಳ ಸಿಡಿತದಿಂದ ವಾಯು ಮತ್ತು ಶಬ್ದ ಮಾಲಿನ್ಯ ಹೆಚ್ಚಾಗುವುದರ ಜೊತೆಗೆ ಮಕ್ಕಳು, ವೃದ್ಧರು, ಅನಾರೋಗ್ಯದಿಂದ ಬಳಲುತ್ತಿರುವವರು ಹಾಗೂ ಪ್ರಾಣಿಗಳ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಸರ್ಕಾರ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಅಲ್ಲದೆ, ಅನುಮೋದಿತ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇತರೆ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಸಾಗಣೆ, ವಿತರಣೆ ಹಾಗೂ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಸಾರ್ವಜನಿಕರು ಅಧಿಕೃತ ಮಾರಾಟಗಾರರಿಂದ ಮಾತ್ರ ಹಸಿರು ಪಟಾಕಿಗಳನ್ನು ಖರೀದಿಸಬೇಕು. ಪಟಾಕಿಗಳ ಪ್ಯಾಕೆಟ್‌ಗಳ ಮೇಲಿರುವ ಅಧಿಕೃತ ಹಸಿರು ಪಟಾಕಿ ಗುರುತು ಹಾಗೂ QR ಕೋಡ್ ಪರಿಶೀಲಿಸಿ ಖರೀದಿಸುವಂತೆ ಸೂಚಿಸಲಾಗಿದೆ. ನಿಯಮ ಉಲ್ಲಂಘಿಸಿ ನಿಷೇಧಿತ ಪಟಾಕಿಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ, ಸ್ಥಳೀಯ ಸಂಸ್ಥೆಗಳು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಪಟಾಕಿಗಳ ಮಾರಾಟ ಮತ್ತು ಬಳಕೆಯ ಮೇಲೆ ನಿಗಾ ವಹಿಸಲಿವೆ. ಶಾಲಾ-ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪರಿಸರ ಸ್ನೇಹಿ ದೀಪಾವಳಿ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆಯೂ ಸೂಚಿಸಲಾಗಿದೆ.

ಆಸ್ಪತ್ರೆಗಳು, ಶಾಲೆಗಳು, ವೃದ್ಧಾಶ್ರಮಗಳ ಸಮೀಪ ಪಟಾಕಿ ಸಿಡಿಸುವುದನ್ನು ತಪ್ಪಿಸಬೇಕು. ಪಟಾಕಿಗಳಿಂದ ಉಂಟಾಗುವ ತ್ಯಾಜ್ಯವನ್ನು ತಕ್ಷಣ ತೆರವುಗೊಳಿಸುವುದು ಸೇರಿದಂತೆ ಪರಿಸರ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

“ಈ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ. ಹಸಿರು ಪಟಾಕಿಗಳನ್ನು ಮಾತ್ರ ಬಳಸೋಣ, ಪಟಾಕಿಗಳ ಬಳಕೆಯನ್ನು ಮಿತಿಗೊಳಿಸೋಣ, ವಾಯು ಮತ್ತು ಶಬ್ದ ಮಾಲಿನ್ಯವನ್ನು ಕಡಿಮೆ ಮಾಡೋಣ ಹಾಗೂ ಆರೋಗ್ಯಕರ ಮತ್ತು ಸ್ವಚ್ಛ ಪರಿಸರವನ್ನು ಕಾಪಾಡೋಣ” ಎಂದು ಸಚಿವ ರಾಮಲಿಂಗಾ ರೆಡ್ಡಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Previous post

ಬಿಜೆಪಿಯ ನಾಯಕರಿಗೆ ಆರ್‌ಎಸ್‌ಎಸ್‌ನಿಂದ ವಿಶೇಷ ಸಂಸ್ಕಾರ ತರಬೇತಿ ನೀಡಲಾಗುತ್ತಿದೆಯೇ? ; ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯ

Next post

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ: ಅರಣ್ಯ ಸಂರಕ್ಷಣೆ, ವನ್ಯಜೀವಿ ರಕ್ಷಣೆ ಹಾಗೂ ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಸಮಗ್ರ ಪರಿಶೀಲನೆ

Post Comment

You May Have Missed