×

ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾದ ಯೋಜನೆ: ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ: ಸಿಎಂ ಸಿದ್ದರಾಮಯ್ಯ

ಕುಮಾರಸ್ವಾಮಿ ಮೇಕೆದಾಟುಗೆ ಅನುಮತಿ ಕೊಡಿಸುತ್ತಿಲ್ಲ ಏಕೆ: ಸಿಎಂ ಪ್ರಶ್ನೆ

ರಾಜ್ಯಕ್ಕೆ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಹೆಚ್ ಡಿ ಕೆ, ಬಿಜೆಪಿ ಸಂಸದರು ಏಕೆ ಧ್ವನಿ ಎತ್ತುತ್ತಿಲ್ಲ: ಸಿಎಂ ಪ್ರಶ್ನೆ

*ಬೆಂಗಳೂರು,ಅ.1:
ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮತ್ತು ಹಿಂದಿನ ಸರ್ಕಾರಗಳು ಅಗತ್ಯ ಹಣ ಬಿಡುಗಡೆ ಮಾಡದೆ ನಿರಾಸಕ್ತಿ ವಹಿದಿದ್ದರಿಂದ ಯೋಜನೆ ನಿಧಾನವಾಯಿತು. ಮತ್ತೆ ನಾವು ಅಧಿಕಾರಕ್ಕೆ ಬಂದು ಯೋಜನೆ ಲೋಕಾರ್ಪಣೆಗೊಳಿಸಿ 110 ಹಳ್ಳಿಗಳಿಗೆ ನೀರನ್ನು ಒದಗಿಸಿದ್ದೇವೆ.

ಆರನೇ ಹಂತದ ಯೋಜನೆಯನ್ನೂ ಕೈಗೆತ್ತಿಕೊಳ್ಳಲು ಈಗಾಗಲೇ ಸೂಚನೆ ನೀಡಿದ್ದೇನೆ. ನಾವು ನುಡಿದಂತೆ ನಡೆಯುತ್ತೇವೆ. ನಾವು ಸುಳ್ಳು ಹೇಳಿ ಅಧಿಕಾರಕ್ಕೆ ಬರುವುದಿಲ್ಲ. ಅಧಿಕಾರಕ್ಕೆ ಬಂದು ಸುಳ್ಳು ಹೇಳದೆ ನುಡಿದಂತೆ ನಡೆದು ಜನರ ಕೆಲಸ ಮಾಡಿ ತೋರಿಸಿದ್ದೇವೆ ಎಂದರು.

ಮೇಕೆದಾಟು ಯೋಜನೆಗೆ ಹೆಚ್ ಡಿ ಕೆ ಯಾಕೆ ಅನುಮತಿ ಕೊಡಿಸುತ್ತಿಲ್ಲ?

ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ತೆರಿಗೆಯಲ್ಲಿ ನಮಗೆ ಅನ್ಯಾಯ ಆಗಿದೆ. ಕೇಂದ್ರ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ತೆರಿಗೆ ಪಾಲಿನಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶಕ್ಕೆ ಬಹುಪಾಲು ಹೋಗಿ ರಾಜ್ಯಕ್ಕೆ ಅನ್ಯಾಯ ಮಾಡಿ ಮಲತಾಯಿ ಧೋರಣೆ ತೋರಿದೆ.

ಮೇಕೆದಾಟು ಯೋಜನೆಗೆ ಅನುಮತಿ ಕೊಡಿ ಎಂದು ಕೇಳುತ್ಯಲೇ ಇದ್ದೇವೆ. ಮಹದಾಯಿಗೂ ಅನುಮತಿ ಕೇಳಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ಕೊಡದೆ ಅನ್ಯಾಯ ಮಾಡುತ್ತಿದೆ. ಹೆಚ್ ಡಿ ಕುಮಾರಸ್ವಾಮಿ ಯಾಕೆ ಅನುಮತಿ ಕೊಡಿಸುತ್ತಿಲ್ಲ? ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿಯ ಸಂಸದರು ಏಕೆ ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ. ಕರ್ನಾಟಕ ರಾಜ್ಯಕ್ಕೆ ಏಕೆ ಮಲತಾಯಿ ಧೋರಣೆ ಎಂದು ಕೇಂದ್ರ ಸರ್ಕಾರವನ್ನು ಇವರ್ಯಾರೂ ಪ್ರಶ್ನಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ವರ್ಷ 4 ಲಕ್ಷ ಕೋಟಿಗೂ ಅಧಿಕ ತೆರಿಗೆ ಕೇಂದ್ರಕ್ಕೆ ಕೊಡ್ತಾ ಇದ್ದೀವಿ. ಆದರೆ ವಾಪಾಸ್ ನಮಗೆ ಬರುತ್ತಿರುವುದು 60ಸಾವಿರ ಕೋಟಿ ಮಾತ್ರ. 100 ಪೈಸೆಗೆ 15 ಪೈಸೆ ಮಾತ್ರ ವಾಪಾಸ್ ಬರುತ್ತಿದೆ. ಇದು ಅನ್ಯಾಯ ಅಲ್ವಾ? ಏಕೆ ಬಿಜೆಪಿ ಸಂಸದರು ಪ್ರಶ್ನಿಸುತ್ತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.

ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಈ ವೇಗಕ್ಕೆ ತಕ್ಕಂತೆ ಮೂಲಭೂತ ಸವಲತ್ತು ಒದಗಿಸುವ ಸವಾಲನ್ನು ನಮ್ಮ ಸರ್ಕಾರ ಸ್ವೀಕರಿಸಿ ಯಶಸ್ವಿಯಾಗಿ ನಿಭಾಯಿಸುತ್ತೇವೆ ಎಂದು ಭರವಸೆ ನೀಡಿದರು.

ಕಾವೇರಿ ಕುಡಿಯುವ ನೀರಿನ ಆರನೇ ಹಂತದ ಯೋಜನೆಯಿಂದ 500 MLD ಕುಡಿಯುವ ನೀರು ಬೆಂಗಳೂರಿಗರಿಗೆ ಸಿಗತ್ತೆ. ಇದನ್ನೂ ನಾವು ಘೋಷಿಸಿದ್ದೀವಿ. ನಾವು ಇದನ್ನೂ ಮಾಡಿ ತೋರಿಸ್ತೀವಿ ಎಂದರು.

ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕರಾದ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಜೈಕಾ ಪ್ರತಿನಿಧಿಗಳು, ಸಚಿವರುಗಳು,ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.

ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.

ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed